ನವದೆಹಲಿ, ಡಿ 15 (DaijiworldNews/SK): 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಮೈತ್ರಿ ಮಾಡಿಕೊಂಡಿದೆ. ಆದರೆ, ಸೀಟು ಹಂಚಿಕೆ ಕುರಿತಾದ ಮಾತುಕತೆಯೊಂದು ನಡೆಯಲು ಬಾಕಿ ಇರುವಾಗಲೇ ಹೊಸ ವಿಚಾರವೊಂದನ್ನು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಅವರು, ಸಂಸತ್ ಭವನದಲ್ಲಿ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಸುದೀರ್ಘ ಮಾತುಕತೆ ನಡೆಸಿದರು ಎಂದು ತಿಳಿದ್ದಾರೆ. ಇದೀಗ ಈ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.