ಬೆಂಗಳೂರು,ಡಿ 20 (DaijiworldNews/PC) : ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ ಮಂಗಳವಾರ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ನಮ್ಮ ರಾಜ್ಯದಲ್ಲಿ ಚಾಮರಾಜನಗರ ನಿವಾಸಿ 64 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದಾರೆ. ನಾಳೆ ತಾಂತ್ರಿಕ ಸಲಹಾ ಸಮಿತಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದರು.
ಕರ್ನಾಟಕದ 4 ಜಿಲ್ಲೆಗಳು ಕೇರಳ ಗಡಿ ಭಾಗದಲ್ಲಿದೆ. ಹೀಗಾಗಿ ರಾಜ್ಯದಲ್ಲಿ ನಾವು ಎಚ್ಚರಿಕೆಯನ್ನು ವಹಿಸಿದ್ದೇವೆ. ಸದ್ಯಕ್ಕೆ ಕರ್ನಾಟಕದಲ್ಲಿ ಭಯಪಡುವಂತಹ ಪರಿಸ್ಥಿತಿ ಇಲ್ಲ. ನಾವು ಕೋವಿಡ್ ಟೆಸ್ಟಿಂಗ್ಗಳನ್ನು ಹೆಚ್ಚು ಮಾಡುತ್ತಿದ್ದೇವೆ. ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ ಐಸಿಯು ಬೆಡ್, ವೆಂಟಿಲೇಟರ್ಸ್, ಆಕ್ಷಿಜನ್ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡಿದ್ದೇವೆ. ಈಗಾಗಲೇ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದಾಗ ಕೇಂದ್ರದ ನೆರವನ್ನು ಕೋರಲಾಗುವುದು ಎಂದು ಹೇಳಿದರು.