ಬೆಂಗಳೂರು,ಡಿ23 (daijiworldNews/RA):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರಕಾರ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂದಕ್ಕೆ ಪಡೆದುಕೊಂಡಿದ್ದು ಇದು ರಾಜಕೀಯ ವಲಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದಲ್ಲಿ ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವು ನಮ್ಮ ಶೈಕ್ಷಣಿಕ ಸಂಸ್ಥೆಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಸೃಷ್ಟಿಸುವಂಥದ್ದು.ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗೆ ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಯುವ ಮನಸ್ಸುಗಳನ್ನು ಧಾರ್ಮಿಕವಾಗಿ ಒಡೆಯುವುದನ್ನು ಉತ್ತೇಜಿಸುತ್ತಿದೆ. ಇದು ಅಂತರ್ಗತ ಕಲಿಕೆಯ ವಾತಾವರಣವನ್ನು ತಡೆಯುತ್ತದೆ. ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ನಿರ್ಮಿಸಬೇಕಾದ ಅಗತ್ಯವಿದೆ ಎಂದಿದ್ದರು.
ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಕಳೆದ ವರ್ಷ ಹಿಜಾಬ್ ವಿವಾದದ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಸರ್ಕಾರದ ನಿರ್ಧಾರವನ್ನು ಕಾನೂನಾತ್ಮಕವಾಗಿ ಎದುರಿಸಲು ಬಿಜೆಪಿ ಸಿದ್ಧವಾಗಿದೆ ಎಂದಿದ್ದಾರೆ.
ಇನ್ನು ಈ ಕುರಿತಾಗಿ ಕೆಲವು ಶಾಸಕರು ಪ್ರತಿಕ್ರಿಯೆ ನೀಡಿದ್ದು ಕಳೆದ ಆರು ತಿಂಗಳಿಂದ ಕಾಂಗ್ರೆಸ್ ಸರಕಾರ ಗೊಂದಲದಲ್ಲಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಸಿಎಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯ ಸರಕಾರ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ಸರಕಾರ ಹಿಜಾಬ್ ಹಿಂಪಡೆದರೆ ಜೇನುಗೂಡಿಗೆ ಕಲ್ಲು ಹೊಡೆದಂತೆ ಆಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ನೆಲೆಯಲ್ಲಿ ಬಿರುಕು ಮೂಡಿಸುತ್ತದೆ. ನಿರ್ಧಾರದ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಸರ್ಕಾರಿ ಆದೇಶವನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ನಮ್ಮ ಸರ್ಕಾರ ಜನರಲ್ಲಿ ಭೇದಭಾವ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.ಹಿಂದಿನ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.