ಬೆಂಗಳೂರು, ಜ 22 (DaijiworldNews/AK): ನಾಳೆ ಜ.23 (ಮಂಗಳವಾರ)ಪಿಎಸ್ಐ ಮರು ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ 117 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ. ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನೇಮಿಸಲಾಗಿದೆ.
ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಬೇರಾವ ಭಾಗದಲ್ಲೂ ಪರೀಕ್ಷಾ ಕೇಂದ್ರವಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು, ಜೆರಾಕ್ಸ್ ಅಂಗಡಿಗಳ ಮೇಲೆ ಪೊಲೀಸರು ಹೆಚ್ಚಿನ ನಿಗಾವಹಿಸಲಿದ್ದಾರೆ
ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಲಿದ್ದಾರೆ.
ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನಾಗಲಿ, ಮೊಬೈಲ್ ನಿಷೇಧಿಸಲಾಗಿದೆ.