ಬೆಂಗಳೂರು, ಜ 31 (DaijiworldNews/AK): ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು.
ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು.
ಸರ್ಕಾರ ಬಂದು 8 ತಿಂಗಳಾಗಿದೆ. DC, CEO ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು
ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವಲ್ಲಿ ನಿಮ್ಮಗಳ ಅನುಭವ ಎಷ್ಟು ನೆರವಾಗಿದೆ ಎಷ್ಟು ಕೇಳಿ ಮಾಹಿತಿ ಸಿಎಂ ಪಡೆದುಕೊಂಡರು.ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಖಾರವಾಗಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು.ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದರು.
DC ಗಳಿಗೆ ಜಾತ್ಯತೀತತೆ ಬಗ್ಗೆ ಕಮಿಟ್ ಮೆಂಟ್ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ ಎಂದರು.