ಶಾಂತಿಪುರ, ಫೆ 01 (DaijiworldNews/SK): ಭೂ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇದೀಗ ಈ ವಿಚಾರವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಶಾಂತಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ ಅವರು, ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ವಿರೋಧ ಪಕ್ಷದ ನಾಯಕರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜೈಲಿಗೆ ಅಟ್ಟುವ ಕೆಲಸವನ್ನು ಮಾಡುತ್ತಿದೆ. ನನ್ನನ್ನು ಜೈಲಿಗೆ ಕಳುಹಿಸಿದರೆ ನಾನು ಅದರಿಂದ ಹೊರಬರುತ್ತೇನೆ ಎಂದರು.
ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ನಾವು ಉತ್ಸುಕವಾಗಿದ್ದೇವು. ಆದರೆ ಈ ಪ್ರಸ್ತಾಪವನ್ನು ಕಾಂಗ್ರೆಸ್ ತಿರಸ್ಕರಿಸಿತು. ನಾವು ಮೈತ್ರಿ ಬಯಸಿದ್ದೆವು, ಆದರೆ ಕಾಂಗ್ರೆಸ್ ಮೈತ್ರಿಗೆ ತಯಾರಿಲ್ಲ ಎಂದು ಹೇಳಿದ್ದಾರೆ.