ನವದೆಹಲಿ, ಫೆ 02 (DaijiworldNews/AA): ಪ್ರತ್ಯೇಕ ರಾಷ್ಟ್ರ ನಿರ್ಮಾಣದ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿ.ಕೆ. ಸುರೇಶ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ಹೊರ ಹಾಕಲಿ. ದೇಶ ವಿಭಜನೆ ಹೇಳಿಕೆ ಸಂಬಂಧ ಡಿ.ಕೆ. ಸುರೇಶ್ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಇವರದ್ದು ದೇಶ ದ್ರೋಹದ ಮನಸ್ಥಿತಿ. ಈ ಹೇಳಿಕೆಯು ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ಬಣ್ಣಿಸಿದ ಕವಿ ಕುವೆಂಪುಗೆ ಮಾಡಿದ ಅವಮಾನ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಸಂಚು ಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.