ವಿಜಯಪುರ,ಫೆ 02 (DaijiworldNews/AK):ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿ, ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು ಎಂದು ವಿವರಿಸಿದರು.
ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ "ಇವ ನಮ್ಮವ ಇವ ನಮ್ಮವ" ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.