ಬೆಂಗಳೂರು, ಫೆ 14 (DaijiworldNews/PC): ಕೆ ಎಸ್ ಆರ್ ಟಿ ಸಿ ನಿಗಮವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ವಿವಿಧ ಸಂಧರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ 1 ಕೋಟಿ ರೂ. ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಯೋಜನೆ ಜಾರಿ ಬಳಿಕ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿದ್ದು ಇದುವರೆಗೂ 12 ಜನ ನೌಕರರ ಕುಟುಂಬದವರಿಗೆ ತಲಾ 1 ಕೋಟಿ ರೂ. ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಮೃತರಾಗುತ್ತಿದ್ದು ಈ ಕಾರಣದಿಂದ ಮೃತರ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತ 3 ಲಕ್ಷ ರೂ. ಗಳನ್ನು 2023 ನವೆಂಬರ್ 01 ರಂದು ಜಾರಿಗೆ ಬರುವಂತೆ 10 ಲಕ್ಷ ರೂ. ಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ ಮುಂದುವರೆದ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ.
ನಿಗಮದ ಕುಟುಂಬ ಕಲ್ಯಾಣ ಪರಿಹಾರ ಯೋಜನೆ ಅಡಿಯಲ್ಲಿ ಕಳೆದ ನವೆಂಬರ್ 2023 ಮತ್ತು ಡಿಸೆಂಬರ್ 2023 ರವರೆಗೆ ಮರಣ ಹೊಂದಿದ 16 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ 10 ಲಕ್ಷ ರೂ. ಪರಿಹಾರ ಚೆಕ್ನ್ನು ವಿತರಿಸಲಾಗಿದೆ.
ಕೆಎಸ್ಆರ್ಟಿಸಿ ರವರು ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಅತೀ ಶ್ರಮ ಜೀವಿಗಳಾಗಿದ್ದು, ನಿಗಮವು ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವುದನ್ನು ತಿಳಿದು ಬಹಳ ಸಂತೋಷವಾಯಿತು. ಈ ಯೋಜನೆಗಳ ಅನುಷ್ಠಾನಕ್ಕಾಗಿ ಶ್ರಮಿಸಿದ ಸಾರಿಗೆ ಸಚಿವರನ್ನು ಹಾಗೂ ಆಡಳಿತ ಮಂಡಳಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್ಆರ್. ಶ್ರೀನಿವಾಸ್ ಅಭಿನಂದಿಸಿದರು.