ಹೊಸದಿಲ್ಲಿ, ಎ27(Daijiworld News/SS): ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪಾಂಡಿಚೆರಿ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಯೋತ್ಪಾದಕರು ವಿಧ್ವಂಸಕ ಕೃತ್ಯ ನಡೆಸುವ ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದು, ಮುಂಜಾಗ್ರತ ಕ್ರಮವಾಗಿ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಭಾರತದ 8 ರಾಜ್ಯಗಳ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅಕ್ಕ-ಪಕ್ಕದ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟಗಳಲ್ಲಿ ಭಾರತೀಯರೂ ಸೇರಿದಂತೆ ಸುಮಾರು 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.
ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಸ್ಫೋಟದ ಹಿಂದೆ ಐಸಿಸ್ ಕೈವಾಡ ಇರುವ ಹಿನ್ನೆಲೆಯಲ್ಲಿ ಭಾರತವೂ ಕಟ್ಟೆಚ್ಚರ ವಹಿಸಿದೆ. ಈ ಹಿಂದೆ ಐಸಿಸ್ ಸೇರಿ ನಾನಾ ಕಡೆ ತಲೆಮರೆಸಿಕೊಂಡಿರುವ 50ಕ್ಕೂ ಅಧಿಕ ಭಾರತೀಯ ಮೂಲದ ಶಂಕಿತ ಉಗ್ರರ ಚಟುವಟಿಕೆಗಳ ಮೇಲೆ ನಿಗಾ ಇಡಲು ಮುಂದಾಗಿದೆ.