ಬೆಂಗಳೂರು, ಫೆ 21(DaijiworldNews/AA): ಶಾಲೆಗಳಿಂದ 100ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ, ಸಿಗರೇಟ್ ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಡಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು, ಹುಕ್ಕಾಬಾರ್ಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಬಾರದು ಅಂತಿದೆ. ಆದರೆ ಅನೇಕ ಬಾರ್ ಮತ್ತು ರೆಸ್ಟೋರೆಂಟ್ಗಳು ಹುಕ್ಕಾ ಬಾರ್ಗಳನ್ನು ಪ್ರಾರಂಭಿಸಿದ್ದಾರೆ. ಧೂಮಪಾನ ತಪ್ಪು ಎಂದರೆ, ಅದನ್ನು ಮತ್ತೊಂದು ರೂಪದಲ್ಲಿ ಪ್ರಾರಂಭಿಸಿದ್ದಾರೆ. ಆದ್ದರಿಂದ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಬಾರ್ ರೆಸ್ಟೋರೆಂಟ್ ಹಾಗೂ ಇತರೆ ಸ್ಥಳಗಳಲ್ಲಿ ಹುಕ್ಕಾ ಬಾರ್ ನಿಷೇಧ ಮಾಡಲಾಗಿದೆ. ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸಿದರೆ ಒಂದು ವರ್ಷಕ್ಕಿಂತ ಹೆಚ್ಚು ಹಾಗೂ 3 ವರ್ಷಕ್ಕೆ ವಿಸ್ತರಿಸುವ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ವಿಧೇಯಕ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿದೆ.