ಬೆಂಗಳೂರು, ಫೆ 26(DaijiworldNews/AA): ವಿಧಾನಮಂಡಲ ಅಧಿವೇಶನ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಇಂದಿನಿಂದ ಫೆ. 28 ರ ಬೆಳಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆ ಈ ಆದೇಶವನ್ನು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೊರಡಿಸಿದ್ದಾರೆ.
ಮಂಗಳವಾರ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ. ಇನ್ನು ಸಂಜೆ 4 ರಿಂದ 5 ಗಂಟೆಯವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಲೋಕಸಭೆ ಚುನಾವಣೆ ನಡೆಯುವ ಮುನ್ನವೇ ರಾಜ್ಯದಲ್ಲಿ ಹೇಗಾದರೂ ಕಾಂಗ್ರೆಸ್ ಪಕ್ಷವನ್ನು ಮಣಿಸಬೇಕೆಂದು ಬಿಜೆಪಿ ದೊಡ್ಡ ಲೆಕ್ಕಾಚಾರವೇ ಹಾಕಿದೆ. ಇದಕ್ಕೆ ಉದಾಹರಣೆ ಎಂಬಂತೆ ಬಿಜೆಪಿ-ಜೆಡಿಎಸ್ ಮೈತ್ರಿಯ 2ನೇ ಅಭ್ಯರ್ಥಿಯಾಗಿ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿಯನ್ನು ಚುನಾವಣಾ ಅಖಾಡಕ್ಕೆ ಇಳಿಸಿದೆ. ಈ ಮೂಲಕ ಕಾಂಗ್ರೆಸ್ ಗೆ ಚೆಕ್ಮೆಟ್ ನೀಡಲು ಬಿಜೆಪಿ ಸರ್ವಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಕಾಂಗ್ರೆಸ್ ಗೆ ಅಡ್ಡಮತದಾನದ ಭೀತಿ ಎದುರಾಗಿದೆ.