ಬೆಂಗಳೂರು, ಫೆ 28 (DaijiworldNews/SK): ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೊದಲನೆಯದಾಗಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬ ತನಿಖೆ ನಡೆಯಬೇಕಾಗಿದೆ. ತದನಂತರ ಘೋಷಣೆ ಕೂಗಿದ್ದು ನಿಜವಾಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಈಗಾಗಲೇ ಇದಕ್ಕೆ ಸಂಬಂಧಿಸಿದ ಸಾಕ್ಷ್ಯಧಾರ ತುಣುಕುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಖಂಡಿತ ಎಂದು ತಿಳಿಸಿದ್ದಾರೆ.