ರಾಜಸ್ಥಾನ, ಫೆ 29 (DaijiworldNews/MS): ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ರಾಜಸ್ಥಾನದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುವುದಿಲ್ಲ ಎಂಬ ಕಾನೂನನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದೆ. ಹೀಗಾಗಿ ಇನ್ನು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.
ರಾಜ್ಯದ 1989 ರ ಕಾನೂನು ಇದಾಗಿದೆ. ಈ ಕಾನೂನಿಗೆ ಸುಪ್ರೀಂ ಕೋರ್ಟ್ನ ಅನುಮೋದನೆಯ ಮುದ್ರೆ ಸಿಕ್ಕಿದೆ. ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ನಿಯಮವು ತಾರತಮ್ಯರಹಿತವಾಗಿದೆ ಎಂದು ತಿಳಿಸಿದೆ. ಇದು ನೀತಿಯ ವ್ಯಾಪ್ತಿಗೆ ಬರುತ್ತದೆ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಫೆಬ್ರವರಿ 20 ರಂದು ಆದೇಶದಲ್ಲಿ ತಿಳಿಸಿದೆ.
ಈ ಮೂಲಕ ಪೀಠವು ಮೇ 25, 2018 ರಂದು ರಾಜಸ್ಥಾನ ಪೊಲೀಸ್ನಲ್ಲಿ ಕಾನ್ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸೈನಿಕ ರಾಮ್ ಲಾಲ್ ಜಾಟ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ . ರಾಮ್ ಲಾಲ್ ರಾಜಸ್ಥಾನ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರಿಂದ ಅವರ ಅರ್ಜಿಯನ್ನು ರಾಜಸ್ಥಾನ ಪೊಲೀಸ್ ಅಧೀನ ಸೇವಾ ನಿಯಮಗಳು, 1989 ರ ಅಡಿಯಲ್ಲಿ ತಿರಸ್ಕರಿಸಲಾಗಿತ್ತು.