ಬೆಂಗಳೂರು, ಫೆ 29(DaijiworldNews/MS): ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿತ್ತು.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.