ಬೆಳಗಾವಿ, ಮಾ 04(DaijiworldNews/AK): ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿ ಅತ್ಯಂತ ಕ್ರೂರವಾಗಿದೆ.ಘಟನೆಯ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೇಯ ಕೃತ್ಯವಾಗಿದ್ದು, ಪೊಲೀಸರು ಈಗಾಗಲೇ ದಾಳಿಕೋರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೃತ್ಯದ ಉದ್ದೇಶ ತನಿಖೆಯಲ್ಲಿ ಗೊತ್ತಾಗಲಿದೆ. ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಯನ್ನೂ ಪಡೆದಿದ್ದೇನೆ. ಗಾಯಗೊಂಡಿರುವ ಬಾಲಕಿಯರು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಘಟನೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಈಗಾಗಲೇ ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ಕ್ಷಿಪ್ರ ಕ್ರಮ ಕೈಗೊಂಡಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿದ ಘಟನೆ ಸೋಮವಾರ ನಡೆದಿದೆ. ಈ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿಗಳ ಮೇಲೂ ಆ್ಯಸಿಡ್ ದಾಳಿ ನಡೆಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.