ಬೆಂಗಳೂರು, ಏ 29 (Daijiworld News/MSP): ಕಳೆದ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳ ಹಿನ್ನೆಲೆಯಲ್ಲಿ ಈ ಬಾರಿ ಮಳೆಗಾಲ ಪ್ರಾರಂಭಕ್ಕೂ ಮುನ್ನ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕವೂ ಮಾಹಿತಿ ಹಂಚಿಕೊಂಡಿರುವ ಸಿಎಂ ಕುಮಾರಸ್ವಾಮಿ, " ಕೊಡಗು ಜಿಲ್ಲೆಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳ ಹಿನ್ನೆಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವನ್ನು ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದ್ದೇನೆ " ಎಂದಿದ್ದಾರೆ.
ಇದಲ್ಲದೆ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ದೂರವಾಣಿ ಮೂಲಕವೂ ಮಾತನಾಡಿದ ಸಿಎಂ, ಕಳೆದ ವರ್ಷ ಮಳೆಗಾಲದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಅತಿವೃಷ್ಟಿ ಸಂಭವಿಸಿ ಪ್ರಾಕೃತಿಕ ದುರಂತ ಸಂಭವಿಸಿದ ಹಿನ್ನಲೆ ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮುಂಗಾರಿನ ಪೂರ್ವಸಿದ್ಧತೆಗಾಗಿ ತಂಡವೊಂದನ್ನು ರಚಿಸಿ, ಮಳೆಗಾಲಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳನ್ನು ಪರಿಶೀಲಿಸಲಿ ಮತ್ತು ಕೊಡಗಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ದುರಸ್ತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಸರಿಯಾಗಿ ಅನುಷ್ಟಾನಗೊಂಡಿದೆಯೇ ಎಂದು ಪರಿಶೀಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.