ಬೆಂಗಳೂರು, ಮಾ 07 (DaijiworldNews/AA): ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳ್ಳುವವರೆಗೂ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸದಂತೆ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇನ್ನು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ನಾಸೀರ್ ಹುಸೇನ್ ಅವರು ಗೆಲುವು ಸಾಧಿಸಿದ್ದು, ಅವರ ಬೆಂಬಲಿಗರು ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಸರ್ಕಾರ ಎಫ್ ಎಸ್ ಎಲ್ ವರದಿ ಬಂದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿತ್ತು.
ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಅವರಿಗೆ ಪ್ರಮಾಣವಚನ ಬೋಧಿಸಬಾರದೆಂದು ಮನವಿ ಮಾಡಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ನಾಸೀರ್ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಹಿಂದೆ ಆಗ್ರಹಿಸಿದ್ದರು.