ಬೆಂಗಳೂರು, ಮಾ 10(DaijiworldNews/AA): ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 7 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನೂ 21 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ. ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಕಾಂಗ್ರೆಸ್ ನಿರೀಕ್ಷೆ ಮಾಡುತ್ತಿದೆ.
ಈ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಬಿಡಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾರ್ಚ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ಸಿಎಂ, ಡಿಸಿಎಂನೊಂದಿಗೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಲಿದ್ದಾರೆ.
ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನೀರೀಕ್ಷೆ ಮಾಡುತ್ತಿರುವುದು ಒಂದು ಕಾರಣವಾದರೆ, ಹಲವು ಕ್ಷೇತ್ರಗಳಿಗೆ ಇನ್ನು ಸಮರ್ಥ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಗೆ ಸಾಧ್ಯವಾಗಿಲ್ಲ. ಜೊತೆಗೆ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಒಮ್ಮತವಿಲ್ಲದಿರುವುದೂ ಕಾರಣವಾಗಿದೆ. ಈ ಹಿನ್ನೆಲೆ ಎಲ್ಲಾ ಗೊಂದಲಗಳ ಇತ್ಯರ್ಥಕ್ಕೆ ಸುರ್ಜೇವಾಲ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.