ನವದೆಹಲಿ,ಏ29(DaijiworldNews/AZM): ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿರುದ್ಧ ಕಾಂಗ್ರೆಸ್ ಲೋಕಸಭಾ ಸದಸ್ಯರಾದ ಸುಶ್ಮಿತಾ ದೇವ್ ಅವರು ಇಂದು ಸುಪ್ರೀಂ ಕೋರ್ಟ್ ಗೆ ದೂರು ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದು, ಇದರ ವಿರುದ್ಧ ಚುನಾವಣಾ ಆಯೋಗ ಯಾವುದೇ ರೀತಿಯ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂದು ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ , ಹೇಳಿದ್ದು,ನ್ಯಾಯಾಲಯ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು.
ಮೋದಿ ಮತ್ತು ಅಮಿತ್ ಷಾ ಚುನಾವಣಾ ಪ್ರಚಾರದ ವೇಳೆ ಸೇನೆ, ಸರ್ಜಿಕಲ್ ಸ್ಟ್ರೈಕ್ ಮತ್ತು ವಾಯುದಾಳಿಯನ್ನು ಪ್ರಸ್ತಾಪಿಸಿ ಮತಯಾಚನೆ ಮಾಡುತ್ತಿದ್ದಾರೆ. ನೀತಿ ಸಂಹಿತೆ ಪ್ರಕಾರ, ಪ್ರಚಾರದ ಸಂದರ್ಭದಲ್ಲಿ ಸೇನೆಯ ಯಾವುದೇ ವಿಷಯ ಪ್ರಸ್ತಾಪ ಮಾಡುವಂತಿಲ್ಲ. ಆದರೆ, ಇಬ್ಬರೂ ನಾಯಕರು ನಮ್ಮ ಸರ್ಕಾರವೇ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.
ಬಾಲ್ಕೋಟ್ ಮೇಲೆ ನಡೆದ ವಾಯುದಾಳಿಗೂ ಬಿಜೆಪಿ ಸರ್ಕಾರವೇ ಕಾರಣ ಎಂದು ಹೇಳುತ್ತಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದರಿಂದ ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.