ಬೆಂಗಳೂರು, ಮಾ 11 (DajiworldNews/AA): ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದಿದ್ದು, ಶಂಕಿತ ಬಾಂಬರ್ ಯಾರೆಂದು ಒಂದು ಹಂತಕ್ಕೆ ಗೊತ್ತಾಗಿದೆ. ಆದರೆ ಇದನ್ನು ದೃಢಪಡಿಸಿಕೊಳ್ಳಬೇಕಾಗಿದೆ. ಸಿಸಿಬಿ, ಎನ್ಐಎ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ಸಂವಿಧಾನ ಬದಲಾವಣೆ ಬಗ್ಗೆ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, "ಪ್ರಧಾನಿಯವರು ಅಂಬೇಡ್ಕರ್ ಸಂವಿಧಾನ ನೀಡಿದ್ದನ್ನು ಶ್ಲಾಘಿಸಿ ಸಂವಿಧಾನ ಇಲ್ಲದಿದ್ದರೆ, ನಾನು ಪ್ರಧಾನಿಯೇ ಆಗುತ್ತಿರಲಿಲ್ಲ" ಎಂದು ಹೇಳಿದ್ದರು. ಆದರೆ ಅವರದೇ ಪಕ್ಷದ ಸಂಸದ ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅನೇಕ ಬಾರಿ ಅನಂತಕುಮಾರ್ ಹೆಗಡೆ ಈ ರೀತಿ ಹೇಳಿಕೆ ನೀಡಿದ್ದಾರೆ. ಸಂವಿಧಾನವನ್ನೇ ಬದಲಿಸುತ್ತೇವೆ ಎಂಬ ಹೇಳಿಕೆ ನೀಡುವುದು ಉತ್ತಮ ಬೆಳವಣಿಗೆಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.