ನವದೆಹಲಿ, ಮಾ 16(DaijiworldNews/MS): ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕೇಜ್ರಿವಾಲ್ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು.
ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ಗಳನ್ನು ತಪ್ಪಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ . 15,000 ರೂ ಬಾಂಡ್ ಮತ್ತು 1 ಲಕ್ಷ ರೂ ಶ್ಯೂರಿಟಿಯ ಮೇಲೆ ಕೇಜ್ರಿವಾಲ್ಗೆ ಜಾಮೀನು ನೀಡಲಾಯಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ 11 ಬಾರಿ ಸಮನ್ಸ್ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್ ಕೇಜ್ರಿವಾಲ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಹಾಜರಾಗುವಂತೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್ ಇಂದು ಕೋರ್ಟ್ಗೆ ಹಾಜರಾಗಿದ್ದಾರೆ. ಇದಕ್ಕೂ ಮೊದಲು ನಡೆದ ವಿಚಾರಣೆಯಲ್ಲಿ, ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.