ನವದೆಹಲಿ, ಮೇ01(Daijiworld News/SS): ಪೂರ್ವ ದಿಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ಗೆ ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಮತ್ತೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಗಂಭೀರ್ ಅವರ ಫೋಟೋವುಳ್ಳ ಜಾಹೀರಾತುವೊಂದು ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಗೌತಮ್ ಗಂಭೀರ್ಗೆ ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಗೌತಮ್ ಗಂಭೀರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಆತಿಶಿ ಅವರು ತಮ್ಮ ಪ್ರತಿಸ್ಪರ್ಧಿ, ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆಯೋಗದ ಪರವಾನಗಿ ಪಡೆಯದೆಯೇ ದಿಲ್ಶಾದ್ ಗಾರ್ಡನ್ನಲ್ಲಿ ಗಂಭೀರ್ ಅವರು ಚುನಾವಣಾ ಸಭೆ ನಡೆಸಿದ್ದಾರೆ. ಮೂರು ದಿನಗಳಲ್ಲಿ ಎರಡನೇ ಬಾರಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರಿದ್ದ ಆತಿಶಿ, ಬಾರಿಬಾರಿ ನಿಯಮವನ್ನು ಮೀರುತ್ತಿರುವ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ಅವರಿಗೆ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದರು.
ಈ ಬೆನ್ನಲ್ಲೇ ಮತ್ತೆ ಗೌತಮ್ ಗಂಭೀರ್ಗೆ ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.