ನವದೆಹಲಿ, ಏ 08 (DaijiworldNews/AA): 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಈ ಹಿಂದೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಮಾ. 22 ರಂದು ನ್ಯಾ. ಕೆ.ಸೋಮಶೇಖರ್ ಹಾಗೂ ನ್ಯಾ. ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.
ಯಾವುದೇ ಶಾಲೆಗಳು ಕೂಡ ಫಲಿತಾಂಶವನ್ನು ಪ್ರಕಟಿಸಬಾರದು. ಫಲಿತಾಂಶ ಪ್ರಕಟಣೆಗೆ ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸುವಂತೆ ಸೂಚಿಸಿತ್ತು. ಹೈಕೋರ್ಟ್ ನ ಸೂಚನೆಯಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದವು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಳಿಸುವ ಸಂದರ್ಭದಲ್ಲು ಸುಪ್ರೀಂ ತಡೆಯಾಜ್ಞೆ ನೀಡಿದೆ.