ಬೆಂಗಳೂರು,ಮೇ05(DaijiworldNews/AZM):ಸಮ್ಮಿಶ್ರ ಸರಕಾರದ ದ್ವೇಷ ರಾಜಕಾರಣವನ್ನು ನಡೆಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಮೇ 6ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.
ರಾಜ್ಯದ ಸಮ್ಮಿಶ್ರ ಸರ್ಕಾರ ವಿರೋದ಼್ಹ ಪಕ್ಷವನ್ನು ಹತ್ತಿಕ್ಕಲು ದ್ವೇಷ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿ ಮೇ.6ರಂದು ಬೆಜೆಪಿ ಪ್ರತಿಭಟನೆಯನ್ನು ನಡೆಸಲು ನಿರ್ಧರಿಸಿದೆ. ಹಾಗೂ ಈ ಕುರಿತು ಮಾಧ್ಯಮದವರೊಂದಿಗೆ ಹೇಳಿಕೆ ನೀಡಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗುವ ಸುಳಿವು ಸಿಕ್ಕ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ದ್ವೇಷದ ರಾಜಕಾರಣ ಮಿತಿ ಮೀರಿದೆ. ರಾಜಕೀಯ ವಿರೋಧಿಗಳು ಮತ್ತು ಮಾಧ್ಯಮದ ವಿರುದ್ಧವೂ ಸರ್ಕಾರ ಪ್ರತಿಕಾರಕ್ಕೆ ಮುಂದಾಗಿರುವುದು ಸ್ಪಷ್ಟವಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ ಎಂದಿದ್ದಾರೆ.
ಈ ಹಿಂದೆ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಪ್ರಧಾನ ಮಂತ್ರಿಯನ್ನು ಹತ್ಯೆ ಮಾಡುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದರು. ಅದೇ ರೀತಿ ಜೆಡಿಎಸ್ ಶಾಸಕರಾದ ನಾರಾಯಣಗೌಡ ಅವರು ನಟರಾದ ದರ್ಶನ್, ಯಶ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಆದರೆ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿ ಬೆದರಿಕೆ ಹಾಕಲು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಪಿಸಿ ಸೆಕ್ಷನ್ 307ರ ಅಡಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣಗಳು ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.