ಕೋಲಾರ, ಏ.17(DaijiworldNews/AK): ಬಿಜೆಪಿ ಸರ್ಕಾರವು ಬಡವರ ಮತ್ತು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸದ ಕಾರಣ ದೇಶದ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಸಂವಿಧಾನಕ್ಕೆ ಧಕ್ಕೆ ಉಂಟಾಗಿದ್ದು, ಇಂಡಿಯಾ ಮೈತ್ರಿಕೂಟವನ್ನು ಅಧಿಕಾರಕ್ಕೆ ತರದಿದ್ದರೆ ಜನತೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದಿದ್ದಾರೆ.ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು. ಇದರಿಂದ ಅಗತ್ಯವಿರುವವರಿಗೆ ಪ್ರಯೋಜನವಾಗಲಿದೆ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಕೋಲಾರದ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ಗೆ (ಬಿಜಿಎಂಎಲ್) ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ.
ದೇಶದಲ್ಲಿ ಪಕ್ಷಪಾತ ತಾಂಡವವಾಡುತ್ತಿದ್ದು, ಎನ್ಡಿಎ ಸರ್ಕಾರದಲ್ಲಿ ಕೇವಲ 20 ಉದ್ಯಮಿಗಳು 70 ಕೋಟಿ ಜನರ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಯಾವುದೇ ಹಂತಕ್ಕೂ ಹೋಗುತ್ತಾರೆ ಎಂದು ಅವರು ಟೀಕಿಸಿದ್ದಾರೆ.