ಬೆಂಗಳೂರು, ಏ. 23(DaijiworldNews/AK):ರಾಜ್ಯ ಕಾಂಗ್ರೆಸ್ನ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆದ ಅಧಿಕೃತ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ನಿಯೋಗವು ಇಂದು ದೂರು ನೀಡಿದೆ.
ನಿಯೋಗವು ಈ ಕುರಿತು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿತು.ಬರ ಪರಿಹಾರದ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ಹಾಗೂ ಭಾರತೀಯ ಜನತಾ ಪಾರ್ಟಿಯ ವಿರುದ್ಧ ರಣದೀಪ್ ಸುರ್ಜೇವಾಲ, ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂಧರ್ಭದಲ್ಲಿ ರಾಜ್ಯದ ಶಕ್ತಿಕೇಂದ್ರವಾದ ವಿಧಾನಸೌಧದ ಆವರಣದಲ್ಲಿ ಇಂತಹ ಅನಧಿಕೃತ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಂತಹ ಹಾಗೂ ಕಾಂಗ್ರೆಸ್ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯೆಲ್ರವರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಲಾಯಿತು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಸದಸ್ಯ ರಮೇಶ್ಗೌಡ ಅವರು ಈ ಮನವಿಗೆ ಸಹಿ ಮಾಡಿದ್ದು, ಆರ್.ಅಶೋಕ್ ನೇತೃತ್ವದ ನಿಯೋಗವು ಈ ಮನವಿ ಸಲ್ಲಿಸಿತು.
ಬರ ಪರಿಹಾರದ ವಿಚಾರವು ಸುಪ್ರೀಂ ಕೋರ್ಟಿನಲ್ಲಿ ಬಾಕಿ ಇದೆ. ಆದರೂ ಕೇಂದ್ರ ಸರ್ಕಾರದ ವಿರುದ್ಧ ಅನಧಿಕೃತವಾಗಿ ಪ್ರತಿಭಟಿಸಿ ಮತದಾರರ ಮನಸ್ಸಿನಲ್ಲಿ ಪಕ್ಷದ ವಿರುದ್ಧ ವಿರೋಧಿ ಭಾವನೆ ಉಂಟುಮಾಡಿ ಚುನಾವಣೆಯಲ್ಲಿ ಅಕ್ರಮ ಲಾಭ ಪಡೆಯುವ ಉದ್ದೇಶವನ್ನು ಹೊಂದಿರುತ್ತಾರೆ. ಆದಕಾರಣ ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಾದ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ವಿರುದ್ಧ ಈ ಕೂಡಲೇ ದೂರು ದಾಖಲಿಸಿ ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಂದಿನ ಹಂತದ ಚುನಾವಣೆ ಪ್ರಚಾರಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಬೇಕೆಂದು ಇನ್ನೊಂದು ಮನವಿ ಆಗ್ರಹಿಸಿದೆ.