ಕೊಪ್ಪಳ (ಕುಷ್ಟಗಿ ),ಏ.2(DaijiworldNews/AK): ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ರವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿ, ರೈತರು, ಹಿಂದುಳಿದವರು, ಬಡವರು, ಅಲ್ಪಸಂಖ್ಯಾತರಿಗೆ ದೊಡ್ಡ ಅನ್ಯಾಯ ಮಾಡಿ ಅವರ ಬದುಕು ದುಸ್ತರಗೊಳಿಸಿದ್ದಾರೆ. ಬೆಲೆಯೇರಿಕೆ, ಹಣದುಬ್ಬರ, ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೀಡಾಯಿತು ಎಂದರು.
ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತ ಮಾಡಿದ್ದು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ಹುಸಿಗೊಳಿಸಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದಿರಿ.
ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಚ್ .ಡಿ. ಕುಮಾರಸ್ವಾಮಿ ಹಾಗೂ 3 ವರ್ಷ 10 ತಿಂಗಳು ಆಡಳಿತ ಮಾಡಿದ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಯಡಿಯೂರಪ್ಪ , ಬಸವರಾಜ ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾದರೂ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಬಡವರಿಗೆ, ಹಿಂದುಳಿದವರಿಗೆ , ಮಹಿಳೆಯರಿಗೆ ಏನೂ ಮಾಡಿಲ್ಲ. ಕರ್ನಾಟಕದಲ್ಲಿ ಲೂಟಿ ಹೊಡೆಯುತ್ತಿದ್ದರು. ಅದಕ್ಕಾಗಿಯೇ ರಾಜ್ಯ ಗುತ್ತಿಗೆದಾರ ಸಂಘದವರು 40% ಸರ್ಕಾರ ಎಂದು ಕರೆದರು. ತನಿಖೆ ಮಾಡಿಸಿ , ನಾವು ಸಾಕ್ಷಿ ಕೊಡುತ್ತೇವೆಂದು ಸಂಘದವರು ಹೇಳಿದರೂ ಬಸವರಾಜ ಬೊಮ್ಮಾಯಿ ಅವರು ಒಪ್ಪಲಿಲ್ಲ ಎಂದರು.