ಬೆಂಗಳೂರು, ಮೇ.1(DaijiworldNews/AA): ಸಂಸದ ಪ್ರಜ್ವಲ್ ರೇವಣ್ಣ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಳ ಜನರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ ಮಾಡಲು ಆಗುವುದಿಲ್ಲ. ಹಾಗಾಗಿಯೇ ಎಸ್ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್ಡಿ ರೇವಣ್ಣರನ್ನು ಬಂಧಿಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಅಪರಾಧ ದಂಡಸಂಹಿತೆಯ ಸೆಕ್ಷನ್ 41a ಅಡಿ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್ಐಟಿ ತಂಡ ಮುಂದಿನ ಪ್ರಕ್ರಿಯೆ ನಡೆಸಲಿದೆ ಎಂದು ಹೇಳಿದ್ದಾರೆ.