ಧಾರವಾಡ, ಮೇ.7(DaijiworldNews/AK):ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ ಅವಕಾಶ ನೀಡಿಲ್ಲ.
ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ
2016 ರ ಜೂನ್ 15 ರಂದು ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿನ ಜಿಮ್ನಲ್ಲಿ ನಡೆದಿದ್ದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ವಾದ-ಪ್ರತಿವಾದ ನಡೆದು ಬೆಂಗಳೂರು ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.
ವಿನಯ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿತ್ತು.