ಬೆಂಗಳೂರು, ಮೇ 20(DaijiworldNews/AA): ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.
ಅಪಹರಣ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ರೇವಣ್ಣ ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಇದೀಗ 42 ಎಸಿಎಎಂ ಕೋರ್ಟ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೊತೆಗೆ 5 ಲಕ್ಷ ರೂ. ಬಾಂಡ್, ಒಬ್ಬ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ನ್ಯಾಯಪೀಠ ಸೆಕ್ಷನ್ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ರೇವಣ್ಣರನ್ನು ಬಿಡುಗಡೆ ಮಾಡಿದೆ.
ಮನೆಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಮಧ್ಯಂತರ ಜಾಮೀನಿನ ಮೂಲಕ ಜೈಲಿನಿಂದ ಹೊರಬಂದಿರುವ ಅವರಿಗೆ ಸದ್ಯ ಜಾಮೀನು ದೊರೆತಿದೆ.