ಬೆಂಗಳೂರು, ಮೇ 27 (DaijiworldNews/AA): ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧ ಪ್ರಕರಣ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ಪ್ರತ್ಯಕ್ಷರಾಗಿದ್ದಾರೆ. ಈ ವೇಳೆ ತಾನು ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅವರು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ತಂದೆ- ತಾಯಿ, ತಾತನ ಕ್ಷಮೆ ಕೋರಿದ್ದಾರೆ. ಜೊತೆಗೆ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆಯಾಚಿಸಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಮಾತನಾಡಿದ ಅವರು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮಾಹಿತಿ ದೊರೆತಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ನನ್ನ ವಿರುದ್ಧ ಪ್ರಕರಣ ದಾಖಲಾಗಿರಲಿಲ್ಲ. ಪ್ರಕರಣದ ತನಿಖೆಗೆ ಎಸ್ಐಟಿ ತಂಡ ಕೂಡ ರಚನೆಯಾಗಿರಲಿಲ್ಲ. ಆ ನಂತರ ಎಸ್ಐಟಿ ನೋಟಿಸ್ ನೀಡಿರುವ ಬಗ್ಗೆ ನನಗೆ ಗೊತ್ತಾಗಿದೆ. ಆದರೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು-ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ತಿಳಿಸಿದ್ದಾರೆ.