ಬೆಂಗಳೂರು,ಮೆ09(DaijiworldNews/AZM): ಸರ್ಕಾರ ರಾಜ್ಯದ ಪದವಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿದೆ.
ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳ 5100 ಉಪನ್ಯಾಸಕರು ಹಾಗೂ 708 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಹಾಗೂ ಇದಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ಕೂಡಾ ದೊರೆತಿದೆ.
ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ನೇಮಕಾತಿಗೆ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ 396 ಪ್ರಾಂಶುಪಾಲರ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದರೊಂದಿಗೆ ಅನುದಾನಿತ ಪದವಿ ಕಾಲೇಜುಗಳಲ್ಲಿನ 312 ಪ್ರಾಂಶುಪಾಲರ ಹುದ್ದೆ ಸೃಷ್ಟಿಸಲಾಗುತ್ತಿದೆ.
1600 ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಇವುಗಳ ಜೊತೆಗೆ 3500 ಉಪನ್ಯಾಸಕರ ಹುದ್ದೆಗಳನ್ನು ಸೃಷ್ಟಿಸಲಾಗುತ್ತಿದೆ. ಖಾಲಿ ಹುದ್ದೆ ಹಾಗೂ ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಅತಿಥಿ ಉಪನ್ಯಾಸಕರಿಗೆ ನೇಮಕಾತಿ ಸಂದರ್ಭದಲ್ಲಿ ಆದ್ಯತೆ ನೀಡಲಿದ್ದು ಶೇ. 50 ರಷ್ಟು ಹುದ್ದೆಗಳನ್ನು ಅತಿಥಿ ಉಪನ್ಯಾಸಕರಿಗೆ ಮೀಸಲಿಡಲಾಗುತ್ತದೆ.