ಬೆಂಗಳೂರು, ಜೂ 01(DaijiworldNews/AA): ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಮೇಲಿದೆ. ಈ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿತ್ತು. ಆದರೆ ಭವಾನಿ ರೇವಣ್ಣ ಅವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಎಸ್ಐಟಿ ಹುಡುಕಾಟ ನಡೆಸುತ್ತಿದೆ.
ಕಿಡ್ನ್ಯಾಪ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಶುಕ್ರವಾರ ಅರ್ಜಿ ವಜಾಗೊಂಡ ಹಿನ್ನೆಲೆ ಬಂಧನ ಭೀತಿಯಿಂದ ಭವಾನಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.