ಬೆಂಗಳೂರು, ಜೂ 13 (DaijiworldNews/MS): ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದ್ದು ಹೀಗಾಗಿ ಬಂಧನ ಭೀತಿ ಎದುರಾಗಿದೆ.
ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ಜೂ.12 ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಅತ್ಯಾಚಾರ ಸಂತ್ರಸ್ತ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಾಯಿ ಕಾನೂನಾತ್ಮಕ ನೆರವು ಕೇಳಲು ಹೋಗಿದ್ದರು. ಈ ವೇಳೆ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ಮಹಿಳೆ ದೂರು ನೀಡಿದ್ದರು. ಆದರೆ, ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಲಾಗಿತ್ತು. ಆದರೆ, ಪ್ರಕರಣ ವಿಚಾರಣೆಗೆ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಎರಡು ಬಾರಿ ನೊಟೀಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಯಡಿಯೂರಪ್ಪ ಬಂಧನಕ್ಕೆ ಅವಕಾಶ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು