ಬೆಂಗಳೂರು, ಜೂ. 15(DaijiworldNews/AA): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣದ ವಿರುದ್ಧ ಜೂ. 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ.
ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಎಸ್ಟಿ ಮುಖಂಡರ ಸಭೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ತೀರ್ಮಾನ ತೆಗೆದುಕೊಳ್ಳಲಾಯಿತು.
ವಾಲ್ಮೀಕಿ ನಿಗಮಕ್ಕೆ ಸಂಬಂಧಪಟ್ಟ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ತಂಡ ರಚಿಸಿತ್ತು. ಹಗರಣಕ್ಕೆ ಸಂಬಂಧಪಟ್ಟಂತೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್ಐಟಿ ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು.