ಬೆಂಗಳೂರು, ಜೂ. 15(DaijiworldNews/AA): ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್ ಅವರು, ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ಬರೆದುಕೊಂಡಿದ್ದಾರೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಮದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಆರ್ ಅಶೋಕ್, ಮಾಜಿ ಸಚಿವ ಸಿ.ಟಿ ರವಿ, ಅಮಿತ್ ಮಾಳವಿಯಾ ಸೇರಿದಂತೆ ಅನೇಕ ನಾಯಕರು ಟೀಕಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿ.ಟಿ ರವಿ ಅವರು ಪೆಟ್ರೋಲ್ ಡಿಸೇಲ್ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ. ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ ಎಂದು ಹೇಳಿದ್ದಾರೆ.
ಇನ್ನು ಕರ್ನಾಟಕ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಿದ್ದು, ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಗೆ ಬರಲಿವೆ. ಕರ್ನಾಟಕದ ಜನತೆ ಬಳಿ ನುಂಗಿ ನೀರು ಕುಡಿಲು ಲೋಕಸಭಾ ಚುನಾವಣೆ ಮುಗಿಯುವುದನ್ನೇ ಕಾಂಗ್ರೆಸ್ ಕಾಯುತ್ತಿತ್ತು ಎಂದು ಅಮಿತ್ ಮಾಳವಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.