ನವದೆಹಲಿ, ಜೂ. 17(DaijiworldNews/AA): ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
ರೈಲು ದುರಂತದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಅಪಘಾತ ಸುದ್ದಿ ಕೇಳಿ ನನಗೆ ತೀವ್ರ ದುಃಖವಾಗಿದೆ. ಮೃತ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಮತ್ತು ರಕ್ಷಣಾ ಕಾರ್ಯಾಚರಣೆ ಯಶಸ್ಸಿಯಾಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಜಲಪಾಯ್ಗುರಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಅಪಘಾತದಲ್ಲಿ ಕಾಂಚನ್ಜುಂಗಾ ಎಕ್ಸ್ಪ್ರೆಸ್ನ ಹಿಂಬದಿಯ ಎರಡು ಬೋಗಿಗಳು ಹಳಿ ತಪ್ಪಿವೆ. ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.
ಇನ್ನು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ.