ಚಿತ್ರದುರ್ಗ, ಜೂ. 18(DaijiworldNews/AA): ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗದ ಹಿನ್ನೆಲೆಯಲ್ಲಿ ಬೇಸತ್ತಿರುವ ಕಾಂಗ್ರೆಸ್ನ 40 ಮಂದಿ ಶಾಸಕರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವಿವೇಚನೆ, ಲೆಕ್ಕಾಚಾರ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ನಂತರ ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆಯಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗದೇ ಇರುವುದರಿಂದ ಕಾಂಗ್ರೆಸ್ನ 40 ಮಂದಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆದಿದ್ದಾರೆ ಎಂದರು.
ಇತ್ತೀಚೆಗಷ್ಟೇ ಶಾಸಕ ಸಿ.ಎಸ್. ನಾಡಗೌಡ ಅವರು ತಮ್ಮ ಸರ್ಕಾರದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ದಿವಾಳಿಯಾಗುವ ಹಂತದಲ್ಲಿದೆ. ಇದರ ವಿರುದ್ಧ ಒಬ್ಬೊಬ್ಬರೇ ಶಾಸಕರು ಬಂಡಾಯ ಏಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸಿಕೊಳ್ಳಲು ತೈಲ ದರ ಏರಿಕೆ ಮಾಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತದ ಅವಧಿಯಲ್ಲಿ ಜಾರಿಗೊಳಿಸಿದ್ದ ಯೋಜನೆ ಮುಂದುವರಿಸಲು ಹಣ ಬಿಡುಗಡೆ ಮಾಡಿಲ್ಲ. ಎಸ್ಸಿಪಿ- ಟಿಎಸ್ಪಿ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ 25,000 ಕೋಟಿ ಹಣವನ್ನು ಬೇರೆ ಉದ್ದೇಶಗಳಿಗೆ ಉಪಯೋಗಿಸಿಕೊಳ್ಳಲಾಗಿದೆ. ಕೂಡಲೇ ಆ ಹಣವನ್ನು ವಾಪಸ್ ಹಾಕಿ ಪರಿಶಿಷ್ಟ ಜಾತಿ, ಪಂಗಡಗಳ ಪ್ರಗತಿಗಾಗಿ ವಿನಿಯೋಗ ಮಾಡಬೇಕು ಎಂದು ಆಗ್ರಹಿಸಿದರು.