ಬೆಂಗಳೂರು, ಜೂ.28(DaijiworldNews/AA): ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ, ಸಚಿವರು ಹೊಡೆದಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಮುಂದೆ ಈಗ ಇರುವುದು ಹೋರಾಟದ ದಿನಗಳು. ಮುಂದೆ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಸಚಿವರ ಮೂಲಕ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ವಿಚಾರ ಎತ್ತಿಸಿದ್ದಾರೆ. ಜನರ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವುದು ಬಿಟ್ಟು ಡಿಸಿಎಂ ಡಿಕೆ ಶಿವಕುಮಾರ್ರನ್ನು ಬಲಿ ಕೊಡಲು ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದಾರೆ ಎಂದು ಅವರು ಕಿಡಿಕಾರಿದರು.
ಈಗ ಸಿಎಂ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ ಅಲ್ವಾ? ಸಿದ್ದರಾಮಯ್ಯನವರು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ಜೊತೆಗೆ ಜನರ ಸಮಸ್ಯೆ ಕೇಳಬೇಕಲ್ವಾ? ನಾವು ಇದನ್ನೇ ಕೇಳಿದರೆ ಸಿಎಂ ಉಡಾಫೆ ಉತ್ತರ ಕೊಡುತ್ತಿದ್ದಾರೆ ಎಂದು ಟೀಕಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣ ಸಂಬಂಧ ಸತ್ಯನಾರಾಯಣ ಅವರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಆದರೆ ಇವರೆಗೂ ನಾಗೇಂದ್ರರನ್ನು ಕರೆದು ಎಸ್ಐಟಿ ವಿಚಾರಣೆ ಮಾಡಿಲ್ಲ. ನಿನ್ನೆ ಕೋರ್ಟ್ ಕೂಡಾ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಅವರು ತಿಳಿಸಿದರು.