ಶಿವಮೊಗ್ಗ, ಜೂ.29(DaijiworldNews/AA): ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಸಿಎಂ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ನಮ್ಮ ರಾಜ್ಯದ ಇತಿಹಾಸದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಲೋಕಸಭಾ ಚುನಾವಣೆ ನಡೆಯುವ ವೇಳೆಯಲ್ಲಿ ಇಷ್ಟೊಂದು ದೊಡ್ಡ ಹಗರಣವಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ. ಲೋಕಸಭೆ ಚುನಾವಣೆಗೆ ಈ ಹಣ ಉಪಯೋಗವಾಗಿದೆ ಎಂಬ ಚರ್ಚೆ ಮಾಡಿದ್ದಾರೆ ಎಂದರು
ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ನಾಗೇಂದ್ರ ರಾಜೀನಾಮೆ ಕೊಡಬೇಕಾಯಿತು. ಚಂದ್ರಶೇಖರ ಅವರು ಡೇತ್ ನೋಟ್ ನಲ್ಲಿ ಅನೇಕ ವಿಷಯ ಬರೆದಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ನಿನ್ನೆ ಕೂಡ ರಾಜ್ಯಾದ್ಯಂತ ಹೋರಾಟ ಮಾಡಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಿದ್ದೇವೆ. ಜುಲೈ 3 ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.