ಬೆಂಗಳೂರು, ಜು.05(DaijiworldNews/AA): ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಹೈಕೋರ್ಟ್ ಮುಂದೂಡಿದೆ.
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿದೆ. ಜೊತೆಗೆ 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ಸರ್ಕಾರದ ಪರ ಎಸ್ಪಿಸಿ ಜಗದೀಶ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಜರಿದ್ದರು, ಪ್ರಜ್ವಲ್ ಪರ ವಕೀಲರು ಅರ್ಜಿಯ ವಿಚಾರಣೆ ತ್ವರಿತವಾಗಿ ನಡೆಸುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡರು. ಈ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ. ಇದೀಗ ಜಾಮೀನು ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಲಾಗಿದೆ ಎಂದು ಆದೇಶಿಸಿದರು.
ಪ್ರಜ್ವಲ್ ವಿರುದ್ಧ 5 ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಜ್ವಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.