ಬೆಂಗಳೂರು, ಮೇ15(Daijiworld News/SS): ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 24*7 ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಇವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕರೆ ನೀಡಿದ್ಧಾರೆ.
ಎಚ್ಡಿ ಕುಮಾರಸ್ವಾಮಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಕೆಲವೊಂದು ಕ್ರಮಗಳನ್ನು ಸೂಚಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ವ್ಯಕ್ತಿಗೆ ಕನಿಷ್ಠ 40 ಎಲ್.ಪಿ.ಸಿ.ಡಿ ನೀರು ಒದಗಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಬೇಕೆಂದು ಹೇಳಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ಳಿಗೆ ಜಿ.ಪಿ.ಎಸ್ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿಲ್ಲ. ಹೀಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಜಿ.ಪಿ.ಎಸ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು. ಹಣ ಸೋರಿಕೆಯಾಗುವುದನ್ನು ಅಧಿಕಾರಿಗಳು ತಡೆಗಟ್ಟಬೇಕು ಎಂದು ತಿಳಿಸಿದ್ದಾರೆ.