ಬೆಂಗಳೂರು, ಜು. 08(DaijiworldNews/AA): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ 197 ಪ್ರಕರಣಗಳು ಪತ್ತೆಯಾಗಿದೆ.
ಇಂದು 197 ಡೆಂಗ್ಯೂ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. 7,362 ಪ್ರಕರಣಗಳಲ್ಲಿ 303 ಸಕ್ರೀಯ ಪ್ರಕರಣಗಳಿವೆ. ಜೊತೆಗೆ ಇಂದು ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮೃತಪಟ್ಟ 7 ಮಂದಿ ಪೈಕಿ ಹಾಸನದಲ್ಲಿ 2, ಮೈಸೂರು, ಹಾವೇರಿ, ಧಾರವಾಡ, ಶಿವಮೊಗ್ಗ ಹಾಗೂ ಬೆಂಗಳೂರಲ್ಲಿ ತಲಾ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ.
ಈಗಾಗಲೇ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ತಕ್ಷಣವೇ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಣಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.