ಬೆಂಗಳೂರು,ಜು 11(DaijiworldNews/MS): ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿ ಯಶಸ್ವಿಯಾಗಿದ್ದು 6 ಸಾವಿರದ 450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಕುರಿತಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1 ಸಾವಿರ ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಭವಿಷ್ಯದಲ್ಲಿ 25 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಜಪಾನ್ನಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳ ಪ್ರಮುಖರ ಜೊತೆ ಚರ್ಚಿಸಲಾಗಿದೆ. 35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ಎ ಬಿ ಪಾಟೀಲ್ ನಿಯೋಗ ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ - ಇನ್ವೆಸ್ಟ್ ಕರ್ನಾಟಕ 2025ರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್ನ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಿದೆ.