ಬೆಂಗಳೂರು, ಜು 11(DaijiworldNews/MS): ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ಸಂಬಂಧ ಜನಪ್ರತಿನಿಧಿಗಳ ನಿಯೋಗ ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಆಮೇಲೆ ನೋಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಂತೆಯೇ ಎಲ್ಲಾ ಜಿಲ್ಲೆಗಳಲ್ಲಿ ಪರಿಶೀಲನಾ ಮತ್ತು ಜನಸ್ಪಂದನ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.
ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸೂಚಿಸಲಾಗಿದೆ ಎಂದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡುವ ಕುರಿತಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ ಸಲ್ಲಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ರಾಜ್ಯದ ಹಲವು ವಿಷಯ ಕುರಿತು ದೆಹಲಿಗೆ ತೆರಳಿ ಪ್ರಧಾನಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.