ಬೆಂಗಳೂರು, ಜು 24(DaijiworldNews/ AK): ಮುಖ್ಯಮಂತ್ರಿಗಳು ದೆಹಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದನದ ಕಲಾಪದಲ್ಲಿ ಇಂದು ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಅವರು ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು. ಅವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳಲ್ಲ ಎಂದು ವಿವರಿಸಿದರು.
ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕುವ ಬದಲಾಗಿ ಸಭೆಗೆ ಹಾಜರಾಗಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು. ರಾಜ್ಯದ ಮುಖ್ಯಮಂತ್ರಿ ಅವರೆಂಬುದನ್ನು ನೆನಪು ಮಾಡಿಕೊಡಲು ಬಯಸುವುದಾಗಿ ಹೇಳಿದರು.ನೀತಿ ಆಯೋಗದ ಸಭೆ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು, ಸಭೆಯಲ್ಲಿ ಭಾಗವಹಿಸಬೇಕು ಎಂದು ಅವರು ಆಗ್ರಹಿಸಿದರು.