ಬೆಂಗಳೂರು, ಜು 29(DaijiworldNews/MS): ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖರ ಸಭೆ ಬೆಂಗಳೂರಿನಲ್ಲಿಂದು ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದರು. ಬಳಿಕ ಬಿ.ವೈ. ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣ ಹಾಗೂ ಮೈಸೂರಿನ ಮುಡಾ ಹಗರಣ, SEPTSP ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಕೆ ವಿರೋಧಿಸಿ ಶೀಘ್ರವೇ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿದೆ ಎಂದರು. ಆಗಸ್ಟ್ 3ರ ಶನಿವಾರದಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭವಾಗಲಿದ್ದು, ಕನಿಷ್ಠ 7 ದಿನಗಳ ಸಮಯ ತೆಗೆದುಕೊಳ್ಳಲಿದೆ.
ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಗಸ್ಟ್ 10ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿಯ ಕೇಂದ್ರ ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಪ್ರಲ್ಹಾದ್ ಜೋಶಿ, ಒಂದೂವರೆ ವರ್ಷದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಹಗರಣಗಳ ಕುರಿತು ಜನಜಾಗೃತಿ ಮೂಡಿಸುವ ಜೊತೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದರು. ಬಿ.ಎಸ್. ಯಡಿಯೂರಪ್ಪ, ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಯಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಬಿಜೆಪಿ-ಜೆಡಿಎಸ್ ಕೈಗೊಂಡಿರುವ ಹೋರಾಟದಲ್ಲಿ ರಾಜ್ಯದ ಜನ ಕೈಜೋಡಿಸಬೇಕು ಎಂದು ಹೇಳಿದರು. .