ಬೆಂಗಳೂರು, ಆ.04(DaijiworldNews/AK):ಬಿಜೆಪಿ–ಜೆಡಿಎಸ್ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸ್ಪಷ್ಟ ಪಡಿಸಿದರು.
ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ.
2018ರಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು.ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ.
ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ.ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು.ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.
ರಾಜ್ಯಪಾಲರ ಬಳಕೆ ದುರದೃಷ್ಟಕರ
ದುರದೃಷ್ಟವಶಾತ್ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ.ಆದರೆ ಕಾಂಗ್ರೆಸ್ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್ ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು.
ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು.