ಬೆಳಗಾವಿ, ಆ 5(DaijiworldNews/MS): ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ನೆರೆ ಹಾವಳಿ ಹೆಚ್ಚಾಗಿದೆ. ವಾಡಿಕೆಯಂತೆ 354 ಮೀಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿಗೆ 578 ಮೀಮೀ ಮಳೆಯಾಗಿರುವುದರಿಂದ ಜನಜೀವನ ಅಸ್ತವ್ಯಸ್ಥವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬೆಳಗಾವಿಯಲ್ಲಿಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಹದಿಂದಾಗಿ 232 ಗ್ರಾಮಗಳು ಜಲಾವೃತವಾಗಿವೆ. 7 ಜನ ಮೃತ್ತಪಟ್ಟಿದ್ದಾರೆ. ಸದ್ಯ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು 15 ಸಾವಿರಕ್ಕೂ ಅಧಿಕ ಜನರಿಗೆ ಆಶ್ರಯ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಪ್ರಾಣಿ ಪಕ್ಷಿಗಳು ಮೃತಪಟ್ಟಿವೆ. ಜನರ ಆರೋಗ್ಯದ ಮೇಲೆಯೂ ಮಳೆ ಪ್ರಭಾವ ಬೀರುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು